ಮೂಡಲಗಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕ್ರಮ ಸ್ವಾಗತಾರ್ಹ ಎಂದು ರಾಜ್ಯ ಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಅವರು ಶ್ಲಾಘಿಸಿದರು.
ನ. 17 ರಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿದ್ದು ಅತ್ಯಂತ ಹಿಂದುಳಿದಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ಈ ಸಮುದಾಯದಲ್ಲಿನ ಬಡವರು ಮತ್ತು ಹಿಂದುಳಿದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
