ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫರ್ಮಾನು
ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು.
ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು.
ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ ನಡುವಿನ ಚುನಾವಣೆಯಾಗಿದೆ. ಕೆಲವರು ಈ ಚುನಾವಣೆಗೆ ಏನೇನೋ ಬಣ್ಣ ಬಳಿಯುತ್ತಿದ್ದಾರೆ. ಇದು ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಪಕ್ಷ-ಪಕ್ಷಗಳ ಮಧ್ಯೆ ಚುನಾವಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸಬೇಕು. ಅದರಂತೆ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು ಎಂದು ತಮ್ಮ ಸಹಕಾರ ಬಂಧುಗಳಿಗೆ ಅವರು ಕರೆ ನೀಡಿದರು.
ಮಹಾಂತೇಶ ಕವಟಗಿಮಠ ಅವರ ಗೆಲುವಿಗೆ ಎಲ್ಲ ಕಾರ್ಯಕರ್ತರು ಪ್ರಯತ್ನಿಸಬೇಕು. ಈ ಚುನಾವಣೆಯಲ್ಲಿ ಕಾಂಗ್ರೇಸ್ ಸೋತರೇ ಮಾತ್ರ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಅನುಕೂಲವಾಗಲಿದೆ. ಆದ್ದರಿಂದ ಎಲ್ಲ ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ನೇರವಾಗಿ ಸಂಪರ್ಕ ಮಾಡಿಕೊಂಡು ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು. ಕಾಂಗ್ರೇಸ್‍ನ್ನು ಸೋಲಿಸುವುದೇ ನಮ್ಮಗಳ ಗುರಿಯಾಗಿರಬೇಕೆಂದು ಅವರು ತಿಳಿಸಿದರು.
ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ವಿವೇಕರಾವ್ ಪಾಟೀಲ ಅವರು ಈ ಬಾರಿ ನಮ್ಮ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದಾರೆ. ಅವರಿಗೆ ಕಾಂಗ್ರೇಸ್ ಪಕ್ಷ ಕೊನೆ ಗಳಿಗೆಯಲ್ಲಿ ಟಿಕೇಟ್ ನಿರಾಕರಿಸಿದ್ದರಿಂದ ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಒಟ್ಟಿನಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ್ ಪಾಟೀಲ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ(ಮೆಳವಂಕಿ) ಹಾಗೂ ದಿಗ್ಧರ್ಶಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.