ಗೋಕಾಕ : ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ ರಸ್ತೆ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವಂತೆಯೂ ಅವರು ಮನವಿ ಮಾಡಿಕೊಂಡರು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಶಾಲಾ ಕಂಪೌಂಡ, ಅಡುಗೆ ಕೋಣೆ, ಭೋಜನಾಲಯ, ಶಾಲಾ ಆವರಣದಲ್ಲಿ ಫೆವರ್ಸ್ ಕಾಮಗಾರಿಗಳನ್ನು ಕೈಗೊಳ್ಳಲು ಮಾತ್ರ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಸಾರ್ವಜನಿಕರಿಗೆ ಅಗತ್ಯವಿರುವ ತೋಟದ ರಸ್ತೆಗಳನ್ನು ಕೈಗೊಳ್ಳಲು ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅರಭಾವಿ ಮತ್ತು ಗೋಕಾಕ ಮತಕ್ಷೇತ್ರಗಳಲ್ಲಿ ಮಳೆಯಿಂದಾಗಿ ಹಾಳಾಗಿರುವ ತೋಟದ ರಸ್ತೆ ಕಾಮಗಾರಿಗಳನ್ನು ತ್ವರೀತಗತಿಯಲ್ಲಿ ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ತೋಟದ ರಸ್ತೆಗಳನ್ನು ಕೂಡಲೇ ಕೈಗೊಳ್ಳುವಂತೆ ಬೆಳಗಾವಿ ಜಿಪಂ ಸಿಇಓ ಅವರಿಗೆ ಆದೇಶ ನೀಡಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ತೋಟದ ರಸ್ತೆಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಕ್ಷಣವೇ ಸೂಚಿಸಬೇಕು. ಕಾಮಗಾರಿಗಳನ್ನು ಈಗಲೇ ಆರಂಭಿಸಿದರೆ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ.
ಬಾಲಚಂದ್ರ ಜಾರಕಿಹೊಳಿ, ಶಾಸಕರು, ಅರಭಾವಿ