ಬೆಳಗಾವಿ: ಚಂದಿಗಡ ನಗರದಲ್ಲಿ ನಡೆದ 190ನೇ ಇಎಸ್‌ಆಯ್ ಕಾರ್ಪೋರೇಶನ ಸಭೆಯಲ್ಲಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ್.ಆಯ್.ಸಿ ಆಸ್ಪತ್ರೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಕಿತ್ತೂರು ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆ ಈಡೇರಿಕೆಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹರ್ಷ ವ್ಯಕ್ತಪಡಿಸಿದರು.
ಸೋಮವಾರ ಫೆ.20 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಕಳೆದ 2 ವರ್ಷಗಳ ಸತತ ಪ್ರಯತ್ನದಿಂದ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸುವ ಮೂಲಕ, ಖುದ್ದು ವೈಯಕ್ತಿಕ ಭೇಟಿಯಾಗುವ ಮೂಲಕ, ರಾಜ್ಯಸಭೆಯ ಕಲಾಪದ ಶೂನ್ಯ ವೇಳೆಯಲ್ಲಿ ಮತ್ತು ಪ್ರಶ್ನೋತ್ತರ ವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿತ್ತು. ಜಿಲ್ಲೆಯಲ್ಲಿ ಸುಮಾರು 1 ಲಕ್ಷ 25 ಸಾವಿರಕ್ಕೂ ಹೆಚ್ಚು ನೋಂದಾಯಿತ ಕಾರ್ಮಿಕ ವರ್ಗವಿದ್ದು ಈ ಎಲ್ಲಾ ಕುಟುಂಬದ ಸದಸ್ಯರುಗಳಿಗೆ ಉಚಿತ ಆರೋಗ್ಯ ಸೇವೆ ದೊರೆಯಲಿದೆ ಎಂದು ಸಂಸದ ಈರಣ್ಣ ಕಡಾಡಿ ಸಂತಸ ವ್ಯಕ್ತ ಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಭೇಟಿ ನೀಡಲಿರುವ ಮುಂಚೆಯೇ ಕೇಂದ್ರ ಸರ್ಕಾರ ಬೆಳಗಾವಿ ಜನೆತೆಗೆ ಒಂದು ಸಂತಸ ಸಂದೇಶವನ್ನು ನೀಡಿದೆ. ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಮತ್ತು ರಾಜ್ಯದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಕಿತ್ತೂರು ಕರ್ನಾಟಕ ಜನತೆಯ ಪರವಾಗಿ ಸಂಸದರು ಅಭಿನಂದಿಸಿ ಧನ್ಯವಾದ ತಿಳಿಸಿದ್ದಾರೆ.
