ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ
ಕೇಂದ್ರ ಸರ್ಕಾರ ರಾಜ್ಯಕ್ಕೆ 800 ಕೋಟಿ ಮಂಜೂರು-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್‍ವೈ) ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಪ್ರಸಕ್ತ ಹಣಕಾಸು ವರ್ಷದಲ್ಲಿ 800 ಕೋಟಿ ಮಂಜೂರು ಮಾಡಲಾಗಿದ್ದು, ಈಗಾಗಲೇ 391.50 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಕುರಿತು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕರ್ನಾಟಕ ರಾಜ್ಯಕ್ಕೆ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ-3ರ ಅಡಿಯಲ್ಲಿ 5.612.50 ಕಿ.ಮೀ ರಸ್ತೆಯನ್ನು ನಿಗದಿಪಡಿಸಲಾಗಿದೆ. ಈಗಾಗಲೇ 5,378 ಕಿ.ಮೀ ರಸ್ತೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ ಸಚಿವರು ರಾಜ್ಯ ಈಗಾಗಲೇ ನಿಗದಿಪಡಿಸಿದ ಗುರಿಯಲ್ಲಿ 1,594 ಕಿ.ಮೀ ರಸ್ತೆಯ ನಿರ್ಮಾಣವನ್ನು ಪೂರ್ಣಗೊಳಿಸಿದೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ-3ರ ಅಡಿಯಲ್ಲಿ ಬಾಕಿ ಉಳಿದಿರುವ ರಸ್ತೆಗಳ ಯೋಜನೆಯ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ, ಶೀಘ್ರದಲ್ಲಿ ಅವುಗಳಿಗೆ ಮಂಜೂರು ನೀಡಲಾಗುವುದು ಎಂದರು.