ಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಿ: ಸಂಜೀವ ಕೌಜಲಗಿ
ಮೂಡಲಗಿ: ಎಲ್ಲ ಕೂಲಿಕಾರ್ಮಿಕರು ತಮ್ಮ ಆರೋಗ್ಯದ ಕಾಳಜಿ ವಹಿಸಿ, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾ ಅಧಿಕಾರಿ ಸಂಜೀವ ಕೌಜಲಗಿ ಹೇಳಿದರು.
ತಾಲೂಕಿನ ಯಾದವಾಡ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಐಇಸಿ ಚಟುವಟಿಕೆಯಡಿ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ಹಾಗೂ ವ್ಯಾಯಾಮದಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಜೊತೆಗೆ ನೆಮ್ಮದಿಯ ಜೀವನಕ್ಕಾಗಿ ನಾವು ಉತ್ತಮ ಹವ್ಯಾಸಗಳನ್ನು ಕೂಡ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಿಡಿಒ ಆರತಿ ಪತ್ತಾರ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರು ಹಾಗೂ ಗ್ರಾಮಸ್ಥರ ಹಿತದೃಷ್ಟಿಯಿಂದ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಎಲ್ಲರೂ ಇದರ ಸದುಪಯೋಗ ಪಡೆಯಬೇಕು. ತಪ್ಪದೇ ಎಲ್ಲರೂ ಕೊರೊನಾ ಲಸಿಕೆಯನ್ನು ಪಡೆಯಬೇಕು ಎಂದರು.
ಆಸ್ಪತ್ರೆಯ ಪ್ರಯೋಗಶಾಲಾ ಅಧಿಕಾರಿ ಎಸ್.ಎನ್. ಗಾಣಗಿ, ತಾಲೂಕು ಐಇಸಿ ಸಂಯೋಜಕ ಮಹಾಂತೇಶ ಜಾಂಗಟಿ, ಬಿಎಪ್ ಟಿ ಅನಿಲಕುಮಾರ ಬಾಗಿಮನಿ, ಆಸ್ಪತ್ರೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ, ಕೂಲಿಕಾರರು ಹಾಗೂ ಗ್ರಾಮಸ್ಥರು ಹಾಜರಿದ್ದರು.