ಮೂಡಲಗಿ: ಕರೋನಾ ಕಾಲದಲ್ಲಿ ಬಡಜನತೆ ಆಹಾರದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಆರಂಭಿಸಿ 3 ವರ್ಷಗಳಾಗಿದ್ದು ಈ ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಬಡವರ ಪಾಲಿಗೆ ವರದಾನವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಿ ಅವರ ಕ್ರಮವನ್ನು ಸ್ವಾಗತಿಸಿದ್ದಾರೆ.
ರವಿವಾರ ನ-05 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕೋವಿಡ್ ಸಂದರ್ಭದಲ್ಲಿ ಬಡವರಿಗೆ ಉಚಿತ ಪಡಿತರ ನೀಡಲು ಪ್ರಾರಂಭಿಸಲಾದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯು ಮುಂದಿನ 5 ವರ್ಷಗಳವೆರೆಗೆ ದೇಶದ 80 ಕೋಟಿ ಬಡ ಜನತೆಗೆ ಅನುಕೂಲವಾಗಲಿದೆ. ಈ ಯೋಜನೆಯನ್ನು ಮುಂದುವರೆಸುವುದರಿಂದ ಸುಮಾರು 2 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ. ಇದು ಬಡವರಿಗೆ ಆಹಾರ ಭದ್ರತೆ ಒದಗಿಸುತ್ತದೆ ಎಂದರಲ್ಲದೇ ಈ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.
